ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ | ಜನತಾ ನ್ಯೂಸ್
ಬೆಂಗಳೂರು : ಅರ್ಚಕರಿಗೆ ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ಶೀಘ್ರ ಕ್ರಮ ತೆಗೆದುಕೊಳ್ಳುವುದಾಗಿ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ನಿರ್ಧರಿಸಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇ ಆಯೋಗ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅನೇಕ ಶಾಸಕರಿಂದ ಹಲವಾರು ಬಾರಿ ಒತ್ತಡ ಬಂದಿದೆ.
ಈ ಹಿನ್ನೆಲೆ ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ 35% ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಮುಜರಾಯಿ ಇಲಾಖೆಯ ಸುಮಾರು 1,034 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.