ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ: ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ | JANATA NEWS

ಬೆಂಗಳೂರು : ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್‌ವೈ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಲೋಕಾಯುಕ್ತ ತನಿಖೆಯ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ.
ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅಧಿಕಾರಿಗಳು, ಗುತ್ತಿಗೆದಾರರನ್ನು ಆರೋಪಿಗಳನ್ನಾಗಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶ ನೀಡಿತ್ತು.
ಬಹುಮಹಡಿ ವಸತಿ ಯೋಜನೆಯ ಗುತ್ತಿಗೆ ಮುಂದುವರಿಸಲು 29 ಕೋಟಿ ರೂ. ಲಂಚವನ್ನು ಯಡಿಯೂರಪ್ಪ ಹಾಗೂ ಕುಟುಂಬ ವರ್ಗ ಪಡೆದಿದೆ. ವಿಜಯೇಂದ್ರ ಹಾಗೂ ಶಶಿಧರ ಮರಡಿ ಒಡೆತನಕ್ಕೆ ಸೇರಿದ ಬೆಲ್ ಗ್ರಾವಿಯಾ ಹಾಗೂ ಎಸ್ವಿಎಸ್ ಸಂಸ್ಥೆಗಳಿಗೆ ಬಂಗಾಲದ ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅಬ್ರಾಹಂ ತಮ್ಮ ದೂರಿನಲ್ಲಿ ಆರೋಪಿಸಿದ್ದರು.
ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ ಮತ್ತು ಹಿಮಾ ಕೊಹ್ಲಿ ಇದ್ದ ಪೀಠ ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ನೀಡಿದೆ. ಬಿಎಸ್‌ವೈ ಪರ ಹಿರಿಯ ವಕೀಲರಾದ ಸಿದ್ದಾರ್ಥ್ ದಾವೆ ಮತ್ತು ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದರು