ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಅಸ್ತು! | JANATA NEWS

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆ ಜನರ ಬಹು ದಿನಗಳ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.
'ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ' ಎಂಬ ಧೈಯದೊಂದಿಗೆ ಹಲವು ಆರೋಗ್ಯ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇನ್ನು 'ಆಯುಷ್ಮಾನ್ ಭಾರತ್' ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಅಂತ ಬಸವರಾಜ್ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ 15,151 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಈ ವೇಳೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆಸ್ಪತ್ರೆಗಾಗಿ ಹತ್ತಾರು ಹೋರಾಟಗಳು ನಡೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಇದೀಗ ಕುಮಟಾದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 53 ಸಮುದಾಯ ಆರೋಗ್ಯ ಕೇಂದ್ರಗಳು, 26 ತಾಲ್ಲೂಕು ಆಸ್ಪತ್ರೆ ಹಾಗೂ ಒಂದು ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ, ಲೋಕಾರ್ಪಣೆ ಮಾಡಲಾಗಿದ್ದು, ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಇದಕ್ಕಾಗಿ ಒಟ್ಟು 781 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ರಾಜ್ಯದ 45 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ವಹಿಸಿದ್ದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.