ಶಾಸಕ ಮಾಡಾಳ್ ಪುತ್ರ ಸೇರಿ ಐವರಿಗೆ ಮಾ.16ರ ವರೆಗೆ ಲೋಕಾಯುಕ್ತ ಪೊಲೀಸರ ವಶಕ್ಕೆ | JANATA NEWS

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಪತ್ತೆಯಾದ ಪ್ರಕರಣ ಸಂಬಂಧ ಪ್ರಶಾಂತ್ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಮಾರ್ಚ್ 16ರ ವರೆಗೆ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಲಯ ಪ್ರಶಾಂತ್ ಮಾಡಾಳ್‌ರನ್ನು ಮೂರು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದೆ. ಮಾರ್ಚ್ 3ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.
ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಪೊಲೀಸರು ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶಾಸಕರ ಖಾಸಗಿ ಕಚೇರಿಯಲ್ಲಿ ಪ್ರಶಾಂತ್ ಮಾಡಾಳ್ ಬಂಧಿಸಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ಹಣ ಪತ್ತೆಯಾಗಿತ್ತು.