ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಸೇರ್ಪಡೆ | JANATA NEWS

ಬೆಂಗಳೂರು : ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಬುಧವಾರ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು.
ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಾಬುರಾವ್ ಚಿಂಚನಸೂರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಒಂದು ತಿಂಗಳ ಹಿಂದೆಯಷ್ಟೇ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸುವ ಸವಾಲು ಹಾಕಿದ್ದರು. ಇದೀಗ ಬಾಬುರಾವ್ ಚಿಂಚನಸೂರು ಅವರು ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ನಂತರ ಮಾತನಾಡಿದ ಅವರು, ''ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಅಂತ ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂಬುದನ್ನು ತೋರಿಸುತ್ತೇನೆ'' ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈಗಾಗಲೇ ಹಳ್ಳಿಗಳಿಂದ ರಾಜ್ಯ ಮಟ್ಟದವರೆಗೆ ನೂರಾರು ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷಗಳ ಕಾಲ ಅಧಿಕಾರ ಇದ್ದರೂ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರು ಅವರು ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾನು ಅವರು ಜತೆಯಲ್ಲಿ ಅನೇಕ ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇವೆ.
ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ ಕಲ್ಯಾಣವಾಗಿ, ಅವರ ಜೀವನ ಭದ್ರಾವಾಗಲಿದೆ. ಈ ಸಮಾಜಕ್ಕೆ ನ್ಯಾಯ ಸಿಗಲಿದೆ ಎಂದು ನಂಬಿಕೆ ಇಟ್ಟು, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ವಿಶ್ವಾಸ ಇಟ್ಟು, ಅವರ ಅನುಯಾಯಿಯಾಗಿ ಪಕ್ಷ ಸೇರುತ್ತಿದ್ದಾರೆ. ಅವರ ರಾಜೀನಾಮೆ ನಿನ್ನೆ ಅಂಗೀಕಾರವಾಗಿದ್ದು, ಇಂದು ಹೊಸ ವರ್ಷದ ಹೊಸ ದಿನ ಆರಂಭವಾಗಲಿ ಎಂದು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದರು