ಬಿಎಸ್ವೈ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರ: ಡಿ.ಕೆ. ಶಿವಕುಮಾರ್ | JANATA NEWS

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಕೋಟಾವನ್ನು ವಿವಿಧ ಎಸ್‌ಸಿ ಉಪಜಾತಿಗಳಿಗೆ ಹಂಚಲು ರಾಜ್ಯ ಸಚಿವ ಸಂಪುಟದ ನಿರ್ಧಾರ ಕೈಗೊಂಡಿದೆ. ಇದಕ್ಕೆ ಕರ್ನಾಟಕದಾದ್ಯಂತ ಬಂಜಾರರು ಸೇರಿದಂತೆ ಇತರ ದಲಿತ ಸಮುದಾಯದ ಜನರು ಪ್ರತಿಭಟನೆ ಮಾಡುತ್ತಿದ್ದಾರೆ.
ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸರನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದ ಯುವಕರು, ಯಡಿಯೂರಪ್ಪ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಯಾವುದೇ ಅಧಿಕಾರದಲ್ಲಿ ಇರದ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಅವರನ್ನು ರಾಜಕೀಯದಿಂದ ಮುಗಿಸಲು ಬಿಜೆಪಿಯೇ ಆಂತರಿಕವಾಗಿ ಕುತಂತ್ರ ನಡೆಸಿದೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದರು.