ಬಿಜೆಪಿ ಯುವ ಮೋರ್ಚಾ ಮುಖಂಡ ಹತ್ಯೆ, ಹಂತಕರ ಬಿಡುವ ಪ್ರಶ್ನೆಯೇ ಇಲ್ಲ ಪ್ರಲ್ಹಾದ್ ಜೋಶಿ | JANATA NEWS

ಹುಬ್ಬಳ್ಳಿ: : ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಧಾರವಾಡ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಹಂತಕರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.
ಚುನಾವಣೆ ಹೊಸ್ತಿಲಲ್ಲೇ ಇಂತಹದೊಂದು ದುರ್ಘಟನೆ ನಡೆದಿದ್ದು ಘಟನೆ ಸಂಬಂಧ ಬಿಜೆಪಿ ನಾಯಕರು ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಗ್ರಾಮದ ಉಡಚಮ್ಮ ದೇವಿ ಜಾತ್ರೆ ವೇಳೆ ಕೆಲವರು ಕುಡಿದು ಜಗಳವಾಡುತ್ತಿದ್ದರು. ಆಗ ಗ್ರಾ.ಪಂ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ ಜಗಳ ಬಿಡಿಸಿ ಕಳುಹಿಸಿದ್ದರು. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ..
ಆಸ್ಪತ್ರೆಗೆ ಕೇಂದ್ರ ಸಚಿವ ಜೋಶಿ ಭೇಟಿ ನೀಡಿ, ಈ ವೇಳೆ ಮಾತನಾಡಿದ ಅವರು, ಬಿಜೆಪಿಯ ಕೆಳಹಂತದ ಕಾರ್ಯಕರ್ತನ ಹತ್ಯೆ ಆಗಿದೆ. ಇದು ರಾಜಕೀಯ ಕೊಲೆ. ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿರುವುದು ದುರ್ದೈವದ ಸಂಗತಿ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು. ಕೊಲೆಗೆ ನಿಖರವಾಗಿ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯಕ್ಕಾಗಿ ನಡೆದ ಕೊಲೆ ಅನ್ನೋ ಮಾಹಿತಿ ಸಿಕ್ಕಿದೆ. ರಾಜ್ಯ ಸರ್ಕಾರ ಅತ್ಯಂತ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಬೇಕು. ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ಧಾರವಾಡ ಎಸ್ಪಿ ಲೋಕೇಶ ಜಗಲಾಸರ್, ಗರಗ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ತಿಳಿಸಿರುವ ಆರೋಪಿಗಳ ಪೈಕಿ ರಾಘವೇಂದ್ರ ಪಠಾತ್ ಸೇರಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರವೀಣ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಪ್ರಹ್ಲಾದ್ ಜೋಶಿ ಸರಣಿ ಟ್ವೀಟ್ ಮೂಲಕ ಹಂತಕರ ವಿರುದ್ಧ ಕಿಡಿಕಾರಿದ್ದಾರೆ. 'ಕೋಟೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಯುವಮೋರ್ಚಾ ಕಾರ್ಯಕಾರಣಿ ಸದಸ್ಯನಾಗಿ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರವೀಣ್ ಕಮ್ಮಾರ್ ಅವರ ಸಾವು ಮನಸ್ಸಿಗೆ ಆಘಾತ ಉಂಟುಮಾಡಿದೆ.
ನಮ್ಮ ಕಾರ್ಯಕರ್ತರ ಸಾವಿಗೆ ಕಾರಣವಾದ ಹಂತಕರನ್ನು ಸುಮ್ಮನೆ ಬಿಡುವ ಮಾತೇ ಇಲ್ಲ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ತೃಪ್ತಿ ಪಡುವ ಅತೃಪ್ತ ಆತ್ಮಗಳನ್ನು ಸಮಾಜದ ಮುಂದೆ ಬೆತ್ತಲಾಗಿಸುವ ಕಾಲ ಸನ್ನಿಹಿತವಾಗಿದೆ. ವಿಷಯ ತಿಳಿದು ಎಸ್ ಡಿ ಎಂ ಆಸ್ಪತ್ರೆಗೆ ಧಾವಿಸಿ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದೆ.
ಮೃತ ಪ್ರವೀಣನ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಹಾಗೂ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಕೋಟೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಯುವಮೋರ್ಚಾ ಕಾರ್ಯಕಾರಣಿ ಸದಸ್ಯನಾಗಿ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರವೀಣ್ ಕಮ್ಮಾರ್ ಅವರ ಸಾವು ಮನಸ್ಸಿಗೆ ಆಘಾತ ಉಂಟುಮಾಡಿದೆ. pic.twitter.com/DXCr27zy6z
— Pralhad Joshi (@JoshiPralhad) April 19, 2023