ಆದಾಯ ಮೀರಿ ಆಸ್ತಿ ಗಳಿಕೆ, ಡಿಕೆಶಿ ವಿರುದ್ಧದ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | JANATA NEWS

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಿಬಿಐ ತನಿಖೆಗೆ ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಮನವಿ ಮಾಡಿದ್ದರು. ಇದು ತಿರಸ್ಕೃತಗೊಂಡಿರುವುದರಿಂದ ಚುನಾವಣೆ ಸಂದರ್ಭದಲ್ಲೇ ಅವರಿಗೆ ಸಂಕಷ್ಟ ಎದುರಾದಂತಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.
ಈ ಕುರಿತಂತೆ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಅರ್ಜಿ ವಜಾಗೊಳಿಸಿರುವುದಾಗಿ ಪ್ರಕಟಿಸಿದೆ. ಇದರಿಂದ ಡಿ.ಕೆ. ಶಿವಕುಮಾರ್ ಮತ್ತೆ ಸಂಕಷ್ಟ ಎದುರಾದಂತಾಗಿದೆ.
ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದೆ ನಡೆದ ವಿಚಾರಣೆ ವೇಳೆ, ಶಿವಕುಮಾರ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣವನ್ನು ದಾಖಲಿಸಿರುವ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳು ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್‌ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರಕ್ಕೆ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸು ಮಾಡಲಾದ ಕ್ರಮ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿರುವುದು ಮತ್ತು ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿರುವ ಕಾರಣ ಚುನಾವಣೆಗೆ ಸ್ಪರ್ಧಿಸಲು ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಸಮಸ್ಯೆ ಆಗದು ಎಂದಿತು.