ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗ | JANATA NEWS

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ.
ಈಗ ನೂತನ ಸರ್ಕಾರ ರಚನೆಯಾಗಬೇಕಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷದ ವಕ್ತಾರರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ನೇತೃತ್ವದ ನಿಯೋಗವು ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದೆ.
ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರ ರಚನೆ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ. ನಮಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ ಮನವಿ ಮಾಡಿಕೊಂಡಿದೆ.
ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಕಾಂಗ್ರೆಸ್ ಶಾಸಕ ಜಿ ಪರಮೇಶ್ವರ ಅವರು ಪಕ್ಷದ ಪ್ರತಿನಿಧಿಯಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ. ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ.
ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಪ್ರಬಲ ನಾಯಕರನ್ನು ಆಹ್ವಾನಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.