ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | JANATA NEWS

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಟ್ವೀಟ್ ಮಾಡಿದ್ದು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳೆಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹ ಟ್ವೀಟ್ ಮಾಡಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲಾ ಸದಸ್ಯರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ.