ಹೊಸ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ, ಸೆಂಗೋಲ್ ಪ್ರತಿಷ್ಠಾಪನೆ! | JANATA NEWS
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಮಂತ್ರಘೋಷಗಳ ಪಠಣದ ನಡುವೆ ಉದ್ಘಾಟಿಸಿದರು.
ನೂತನ ಸಂಸತ್ ಭವನದಲ್ಲಿ ನಡೆದ 'ಸರ್ವ ಧರ್ಮ ಪ್ರಾರ್ಥನೆ' ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಟಾಟಾ ಟ್ರಸ್ಟ್ನ ಅಧ್ಯಕ್ಷ ರತನ್ ಟಾಟಾ, ಕೇಂದ್ರ ಸಚಿವ ಹೆಚ್.ಎಸ್ ಪುರಿ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಮತ್ತು ವಿವಿಧ ಧಾರ್ಮಿಕ ಮುಖಂಡರು ಸೇರಿದಂತೆ ಕೇಂದ್ರ ಸಚಿವರು ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.
ನೂತನ ಸಂಸತ್ ಭವನದಲ್ಲಿ ಐತಿಹಾಸಿಕ 'ಸೆಂಗೊಲ್' ಸ್ಥಾಪಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಮಠಾಧೀಶರಿಂದ ಆಶೀರ್ವಾದ ಪಡೆದರು.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ 'ಸೆಂಗೋಲ್' ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು. ಪೂಜ್ಯರ ಆಶೀರ್ವಾದ ಪಡೆದ ಪ್ರಧಾನಿಗಳು, ಅದರ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದೇ ಸೆಂಗೋಲ್ ಅನ್ನು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಆಗಸ್ಟ್ 14 ರ ರಾತ್ರಿ ತಮ್ಮ ನಿವಾಸದಲ್ಲಿ ಹಲವಾರು ನಾಯಕರ ಸಮ್ಮುಖದಲ್ಲಿ ಸ್ವೀಕರಿಸಿದ್ದರು.