ಬಿಜೆಪಿ, ಜೆಡಿಎಸ್, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ | JANATA NEWS
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಮತ್ತು ಹೊರಗೆ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು. ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ನಾಡಿನ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಜತೆ ಹೋರಾಟಕ್ಕೆ ಮುಂದಾಗಿದ್ದೇವೆ. ಜನರ ಭೂಮಿ ಕಬಳಿಸುವ ಈ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡುತ್ತೇವೆ. ಸರಕಾರ ಸದನ ಸಮಿತಿ ವರದಿ ಇಟ್ಟುಕೊಂಡು ಸುಮ್ಮನಿದ್ದರೆ ಯಾರಿಗೆ ಲಾಭ? ಈ ಯೋಜನೆಯನ್ನೂ ಸ್ಕ್ರಾಪ್ ಮಾಡಿದರೆ ₹30,000 ಕೋಟಿ ಹಣ ಸಿಗುತ್ತದೆ. ಭಾಗ್ಯಗಳಿಗೆ ಅದನ್ನು ಬಳಸಿ ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ - ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರಕಾರದ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಈಗ ಬ್ರ್ಯಾಂಡ್ ಬೆಂಗಳೂರು ಎಂದು ಜಪ ಮಾಡುತ್ತಿರುವವರೇ ಹಿಂದೆ ನೈಸ್ ನೊಳಕ್ಕೆ ನೈಸಾಗಿ ಸೇರಿಕೊಂಡು ಸಹಕಾರ ನೀಡಿದ್ದರು. ಈಗ ಅವರೇ ಅಧಿಕಾರದಲ್ಲಿ ಇದ್ದಾರೆ. ಅದಕ್ಕೆ ಎರಡೂ ಪಕ್ಷಗಳ ವತಿಯಿಂದ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಅಲ್ಲದೆ; ನೈಸ್ ರಸ್ತೆಯ ಸುತ್ತಮುತ್ತ ನಮ್ಮ ಪಕ್ಷವೂ ಒಳಗೊಂಡಂತೆ ಬೇರೆ ಯಾವುದೇ ಪಕ್ಷದ ರಾಜಕಾರಣಿಗಳ ಭೂಮಿ ಇದ್ದರೆ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಹೇಳಿದರು.
ಸದನ ಸಮಿತಿ ವರದಿ, ಸಂಪುಟ ಉಪ ಸಮಿತಿ ವರದಿ, ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಸರಕಾರದ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯ ಸರಕಾರದ ಸ್ಪಷ್ಟ ನಿಲುವು ತಿಳಿಸಬೇಕು. ಈ ಸರಕಾರದಲ್ಲಿ ಇರುವವರು ಈ ಹಿಂದೆ ಈ ಯೋಜನೆಗೆ ಸಂಬಂಧಿಸಿ ಹೇಗೆ ನಡೆದುಕೊಂಡಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಈ ಸರಕಾರ ಭ್ರಷ್ಟಾಚಾರದ ವಿರುದ್ದ ಇದೆಯೊ ಇಲ್ಲವೋ ಅನ್ನುವುದು ಈ ಪ್ರಕರಣದಿಂದ ತಿಳಿಯಲಿದೆ ಎಂದು ಬೊಮ್ಮಾಯಿ ಹೇಳಿದರು.