ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ | JANATA NEWS

ಬೆಂಗಳೂರು : ಆಗಸ್ಟ್ 30ರಂದು ಮೈಸೂರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಅರಮೆನ ಮೈದಾನದಲ್ಲಿನ ವೃಕ್ಷ ಸಾಂಪ್ರದಾಯಿಕ ಕಲಾಮಂದಿರ ಶನಿವಾರ ನಡೆದ 'ನಮ್ಮೂರ ನಾಗರ ಪಂಚಮಿ' ಹಬ್ಬದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಮಹತ್ವದ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟು ಎಂದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮ ಸಿದ್ಧತೆ ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ಮಾಹಿತಿ ನೀಡಿದರು. ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಹೇಳಿದರು.