ಅತ್ತಿಬೆಲೆ ಪಟಾಕಿ ಗೋದಾಮು ದುರಂತ, ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ | JANATA NEWS

ಬೆಂಗಳೂರು : ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. 14 ಜನ ಮೃತಪಟ್ಟಿರುವುದು ದೊಡ್ಡ ದುರಂತ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರೆಲ್ಲರ ಕುಟುಂಬ ದವರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು.ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಟಾಕಿ ಮಾರಾಟ ಮಾಡುವ ಹಾಗೂ ದಾಸ್ತಾನು ಮಾಡುವ ಜಾಗದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯವಾಗಿ ಇಲ್ಲಿ ಸ್ಪೋಟಕ ಕಾಯ್ದೆ ಉಲ್ಲಂಘನೆಯಾಗಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣವನ್ನು ನಾವು ಸಿಐಡಿಗೆ ಹಸ್ತಾಂತರಿಸುತ್ತಿದ್ಧೇವೆ. ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ತಪ್ಪು ಮಾಡಿದವರು ಯಾರೇ ಆದರೂ ಅವರನ್ನು ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304, 337, 338, 9 (ಬಿ) ಸ್ಪೋಟಕ ವಸ್ತು ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎನ್ನಲಾಗಿದೆ.