ಐಟಿ ದಾಳಿ: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆಯಲ್ಲಿ 42 ಕೋಟಿ ರೂ. ಹಣ ಪತ್ತೆ! | JANATA NEWS
ಬೆಂಗಳೂರು : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದ ವೇಳೆ ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು.
ತೆರಿಗೆ ವಂಚನೆ ಸಂಬಂಧ ನಗರದ 10ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಏಕಕಾಲದಲ್ಲಿ ಆರ್ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ನಡೆದಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಕಂತೆ ಕಂತೆ ನೋಟುಗಳು ಕಂಡು ಅಧಿಕಾರಿಗಳು ಬೆಚ್ಚಿಬಿದ್ದರು. ಫ್ಲಾಟ್ನಲ್ಲಿ ಬರೊಬ್ಬರಿ 23 ಬಾಕ್ಸ್ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.
ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್. ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ, ಪತಿ ಗುತ್ತಿಗೆದಾರ ಆರ್.ಅಂಬಿಕಾಪತಿ ಮತ್ತು ಅಂಬಿಕಾಪತಿ ಸೋದರ ಪ್ರದೀಪ್ ಫ್ಯ್ಲಾಟ್ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್ ರೂಮ್ನ ಮಂಚದ ಕೆಳಗೆ 23 ಬಾಕ್ಸ್ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪ್ರದೀಪ್ನನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇಕಡಾ 40ರಷ್ಟು, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಹೇಳಿ ಕೆಲವು ರಾಜಕೀಯ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ್ದರು.
ಬೆಂಗಳೂರಿನಲ್ಲಿ ಬಿಲ್ಡರ್ಸ್, ಚಿನ್ನದ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರಿಂದ ಈ ಹಣ ಸಂಗ್ರಹಿಸಲಾಗಿದೆ. ಹೀಗೆ ಸಂಗ್ರಹಿಸಲಾದ ಹಣವನ್ನು ಬೆಂಗಳೂರಿನಿಂದ-ಚೆನ್ನೈಗೆ, ಚೆನ್ನೈಯಿಂದ-ಹೈದರಾಬಾದ್ ಗೆ ವಾರ್ಗವಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತೆಲಂಗಾಣ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇಲ್ಲಿ ಹಣ ಸಂಗ್ರಹಿಸಿ ಅಲ್ಲಿಗೆ ಕಳುಹಿಸಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.