ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ | JANATA NEWS
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಪೂರ್ಣಗೊಂಡಿತ್ತು.
ಅಧಿಕೃತ ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ವಿಷಯ ಕೂಡ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯಾಧ್ಯಕ್ಷ ಹಾಗೂ ವಿರೋಧಪಕ್ಷದ ನಾಯಕರ ನೇಮಕ ವಿಚಾರದಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಪ್ರಶ್ನೆಗಳು ಎದ್ದಿದ್ದವು.
ಲೋಕಸಭಾ ಚುನಾವಣೆ ಮತ್ತು ಪಕ್ಷದ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನದಂತಹ ಮಹತ್ವದ ಜವಾಬ್ದಾರಿ ನೀಡಿದ್ದು, ವಿಜಯೇಂದ್ರ ಯುವ ನಾಯಕರಾಗಿರುವ ಕಾರಣ ಕಾರ್ಯಕರ್ತರ ಪಡೆ ಇನ್ನಷ್ಟು ಬಲವಾಗುವ ಜತೆಗೆ ಪಕ್ಷ ಸಂಘಟನಾ ಸಾಮರ್ಥ್ಯವು ಹೆಚ್ಚಾಗುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ ಎನ್ನಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ಶಿವಮೊಗ್ಗದ ಸಂಸದರಾದ ಸಹೋದರ ಬಿ.ವೈ.ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು. ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ