ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ | JANATA NEWS
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಚರ್ಚೆಗೆ ಅವಕಾಶ ನೀಡದಿದ್ದರೆ ರಾಜ್ಯದ ಎರಡೂ ಪ್ರತಿಪಕ್ಷಗಳೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದೂ ಸಹ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಪಕ್ಷ ನಾಯಕರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಯ ವಿವರ ಚಿತ್ರ ಸಹಿತ ಬಿಜೆಪಿ ಹಂಚಿಕೊಂಡಿದೆ.
ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಡಿಸಿಎಂ ಡಾ. ಅಶ್ವತನಾರಾಯಣ, ಮಾಜಿ ಸಚಿವ ಸುನೀಲಕುಮಾರ ಇನ್ನಿತರು ವಿಧಾನಸಭೆಯೊಳಗೆ ಮಲಗಿರುವುದು ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ಸದಸ್ಯರು ವಿಧಾನಸೌಧದ ಕಾರಿಡಾರ್ನಲ್ಲಿ ಭಜನೆ ಮಾಡುತ್ತಾ ಹೆಜ್ಜೆ ಹಾಕಿದ್ದಾರೆ.
ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಂಡಿದೆ. ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡುತ್ತಿದ್ದ ಬಿಜೆಪಿ, ಜೆಡಿಎಸ್ ಸದಸ್ಯರು ಬುಧವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
ಅತ್ತ ದಲಿತರ ಹಣವೂ ಲೂಟಿ, ಇತ್ತ ಮುಡಾವೂ ಲೂಟಿ, ಹಗರಣಗಳ ಸರದಾರ ಕಾಂಗ್ರೆಸ್ ಸರ್ಕಾರ ಎಂಬ ಭಿತ್ತಿಪತ್ರ ಹಿಡಿದುಕೊಂಡು ಧರಣಿ ಆರಂಭಿಸಿದ ಬಿಜೆಪಿ, ಜೆಡಿಎಸ್ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಾರೆ.
ಧರಣಿ ಮುಂದುವರಿಸಿದ ಬಿಜೆಪಿ, ಜೆಡಿಎಸ್ ಸದಸ್ಯರು ಭಜನೆ, ಹಾಡಿನ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದರು. ಕಂಸಾಳೆ, ತಾಳ ಬಡಿಯುತ್ತಾ ಭಜನೆ ಜೊತೆಗೆ ಸಿನಿಮಾದ ಹಾಡುಗಳನ್ನೂ ಹಾಡಿದ್ದಾರೆ.