ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ | JANATA NEWS
ನವದೆಹಲಿ : ಗುರುವಾರ 92 ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯ ಅವಧಿಯನ್ನು ಘೋಷಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ದಿವಂಗತ ಡಾ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕಳೆದ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಜೆ.ಪಿ.ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 92 ವರ್ಷ. ರಾತ್ರಿ 9.51ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಯೋಸಹಜ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು.
ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಮಾಜಿ ಪ್ರಧಾನಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು.
2004 ರಿಂದ 2014 ರವರೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ಮನಮೋಹನ್ ಸಿಂಗ್ ಎರಡು ಅವಧಿಗೆ ಪ್ರಧಾನಿಯಾಗಿದ್ದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿಯವರ ಅಂತಿಮ ಸಂಸ್ಕಾರ ನಡೆಯಲಿದೆ.