ಸಂಪುಟದಿಂದ ಈಶ್ವರಪ್ಪ ವಜಾ ಮಾಡಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ: ಡಿಕೆ ಶಿವಕುಮಾರ್ ಒತ್ತಾಯ | ಜನತಾ ನ್ಯೂಸ್
ಮಂಗಳೂರು : ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ಯಡಿಯೂರಪ್ಪ ಅವರು ಸರಿಯಾಗಿ ಕೆಲಸ ಮಾಡುತ್ತಿದ್ದರೆ, ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈವರೆಗೆ ಯಾವುದೇ ಒಬ್ಬರೇ ಒಬ್ಬ ಸಚಿವರು ಸಿಎಂ ಆಡಳಿತದ ಬಗ್ಗೆ ಚರ್ಚೆ ಮಾಡಿಲ್ಲ. ಆದ್ರೇ ಇದೀಗ ಸಚಿವ ಈಶ್ವರಪ್ಪನವರು ಮಾಡಿದ್ದಾರೆ. ಈ ಮೂಲಕ ದೇಶಕ್ಕೆ ಪಾಠ ಹೇಳುತ್ತಿದ್ದವರು ಆಡಳಿತ ಪಾಠವನ್ನು ದೇಶಕ್ಕೆ ಮಾಡಿದ್ದಾರೆ ಎಂದರು.
ಸಚಿವ ಈಶ್ವರಪ್ಪ ಬರೆದಿರುವಂತ ಪತ್ರ ಕೇವಲ ಪತ್ರವಲ್ಲ. ರಾಜ್ಯ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಮೇಲೆ ವಿಶ್ವಾಸ ಇಲ್ಲ ಎಂದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಚಿವರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.
ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದ ಅವರು, ಮುಖ್ಯಮಂತ್ರಿ ಸರಿಯಾಗಿ ಆಡಳಿತ ನಡೆಸುತ್ತಿದ್ದರೆ, ಕೂಡಲೇ ಈಶ್ವರಪ್ಪ ಅವರನ್ನು ವಜಾ ಮಾಡಬೇಕು. ಇಲ್ಲವೇ ತಾವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.