1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ: ಡಿಸಿಎಂ ಡಾ. ಅಶ್ವತ್ಥನಾರಾಯಣ | ಜನತಾ ನ್ಯೂಸ್
ಮಂಗಳೂರು : ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ, ಈಗಾಗಲೇ 8 ಪ್ರಮುಖ ಬೇಡಿಕೆಗಳನ್ನು ಈಡೇರಿಸಲಾಗಿದೆ. ಆರನೇ ವೇತನ ಆಯೋಗ ಶಿಫಾರಸು ಜಾರಿ ಸಾಧ್ಯವಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಸಾರಿಗೆ ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತವಾದ ವೇತನವನ್ನು ಸರಕಾರ ನೀಡಲು ಸಿದ್ದವಿದೆ.
ಸಾರಿಗೆ ನೌಕರರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನವನ್ನ ಬಿಡುಗಡೆ ಮಾಡಿದೆ. 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಸಾರಿಗೆ ಸಂಸ್ಥೆಗಳಿಗೆ ತುಂಬಾ ನಷ್ಟವಾಗಿದೆ. ಇದರ ನಡುವೆ ಸಾರಿಗೆ ನೌಕರರ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದರು.