ಕೊರೊನಾ ವೇಳೆ ರಾಜ್ಯದಲ್ಲಿ 4 ಸಾವಿರ ವೈದ್ಯರ ನೇಮಕ: ಆರೋಗ್ಯ ಸಚಿವ ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ.
ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು 4,000 ವೈದ್ಯರನ್ನ ನೇಮಿಸಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಎಂಬಿಬಿಎಸ್ ಪದವೀಧರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಒಂದು ವರ್ಷ ಸೇವೆ ಸಲ್ಲಿಸುವ ಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. 1,001 ವೈದ್ಯರನ್ನು 18 ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಗುತ್ತಿಗೆ ನೇಮಕ ಮಾಡಲಾಗಿದೆ.
ಆರೋಗ್ಯ ಇಲಾಖೆಯ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಐಸಿಯುನಲ್ಲಿ ಕೆಲಸ ಮಾಡಲು 666 ವೈದ್ಯರನ್ನು ನೇಮಕ ಮಾಡಲಾಗಿದೆ. ಜೂನ್ 30 ರೊಳಗೆ ಅವರೆಲ್ಲರೂ ಸ್ಥಳಕ್ಕೆ ಹೋಗಿ ಕೆಲಸ ಆರಂಭಿಸಲಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 348 ವೈದ್ಯರ ಹುದ್ದೆ ತುಂಬಲಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 90, ನೆಫ್ರೋ ಯುರಾಲಜಿಯಲ್ಲಿ 3 ವೈದ್ಯರನ್ನು ನೇಮಿಸಲಾಗಿದೆ. ಒಟ್ಟು 2,108 ಖಾಲಿ ಹುದ್ದೆ ಇದ್ದು, 2,053 ವೈದ್ಯರು ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆಸಿದ ನೇರ ನೇಮಕವೂ ಸೇರಿ ಒಟ್ಟು ನಾಲ್ಕು ಸಾವಿರದಷ್ಟು ವೈದ್ಯರ ನೇಮಕ ನಡೆದಿದೆ. ಇದು ಐತಿಹಾಸಿಕವಾದ ಪ್ರಕಿಯೆ ಎಂದರು.
ಪ್ರತಿನಿತ್ಯ ಒಂದೂವರೆ ಲಕ್ಷ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ. ಕಳೆದ 2 ದಿನಗಳಿಂದ 11 ಜಿಲ್ಲೆಗಳಲ್ಲಿ ಕೊವಿಡ್ನಿಂದ ಸಾವಾಗಿಲ್ಲ. ಡಾ.ರೆಡ್ಡೀಸ್ ಲ್ಯಾಬ್ನಿಂದ 2ಜಿ ಔಷಧ ಬಿಡುಗಡೆಯಾಗಿದೆ. ಈ ಔಷಧವನ್ನು ಖರೀದಿ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 3ನೇ ಅಲೆ ವೇಳೆಗೆ ಅಗತ್ಯ ಪ್ರಮಾಣದ ಔಷಧ ಖರೀದಿ ಸಂಗ್ರಹಿಸಲು ತಯಾರಿ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.
ಕೊವಿಡ್ 3ನೇ ಅಲೆ ನಿರ್ವಹಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಪ್ರತ್ಯೇಕ ಹೊಸ ಸಮಿತಿ ರಚಿಸಲಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಸದ್ಯ ಈಗಿರುವ ಕೊವಿಡ್ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುವುದು. ಈಗ ಇರುವ ಸಮಿತಿಯಲ್ಲಿ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.